ಕಾನೂನು ಸೇವಾ ಕಾಯಿದೆ ಜಾರಿಗೆ ತರಲಾಗಿದೆ ಎಂದು ಹಿರಿಯ ಸಿ ವಿ ಲ್ ನ್ಯಾಯಾಧೀಶ ಡಿ.ಆರ್.ಮಂಜುನಾಥ್ ತಿಳಿಸಿದರುavintvcom
ಹಣದ ಕೊರತೆಯಿಂದ ಜನ ಸಾಮಾನ್ಯರು ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು. ಅನಕ್ಷರಸ್ಥ ಹಾಗೂ ಬಡ ವರ್ಗದವರಿಗೆ ಉಚಿತ ಕಾನೂನು ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯಿದೆ ಜಾರಿಗೆ ತರಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್.ಮಂಜುನಾಥ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಸೋಮವಾರ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ನಾಗರಿಕರಿಗೆ ಕಾನೂನು, ಮೂಲಭೂತ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಲ್ಲಿ ಮಾದ್ಯಮಗಳು ಪ್ರಮುಖ ಪಾತ್ರ ವಹಿಸಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಮುಂದುವರೆದಿದ್ದು, ಕಾನೂನಿನ ಅರಿವು ಮೂಡಿಸುವಲ್ಲಿ ಮಾದ್ಯಮಗಳ ಪಾತ್ರ ಪ್ರಮುಖವಾದದ್ದು ಎಂದು ಹೇಳಿದರು.
ಶಿಡ್ಲಘಟ್ಟ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ ಅವರು ಮಾತನಾಡಿ, ಯಾರೊಬ್ಬರೂ ಕಾನೂನಿನಲ್ಲಿ ಪರಿಹಾರ ಪಡೆದುಕೊಳ್ಳುವಲ್ಲಿ ವಂಚಿತರಾಗಬಾರದು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ಕಾಯಿದೆಯ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ.ರೋಹಿಣಿ, ಮಹಿಳಾ ಸಾಂತ್ವಾನ ಕೇಂದ್ರದ ಅಧ್ಯಕ್ಷೆ ವಿಜಯಾ ವೆಂಕಟರಾಮ್, ವಕೀಲರ ಸಂಘದ ಕಾರ್ಯದರ್ಶಿ ಎಂ,ಬಿ.ಲೋಕೇಶ್ ಹಾಜರಿದ್ದರು.