*ವಿಶ್ವ ಕನ್ನಡ ಸಮ್ಮೇಳನ – ಇಲ್ಲ:*
1 min read
ಅವಿನ್ ಟಿವಿ ಸುದ್ದಿಜಾಲ ✒️: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯದಿರುವುದಕ್ಕೆ ಇತ್ತೀಚಿನ ವಿದ್ಯಮಾನಗಳೇ ಕಾರಣ: ಸಚಿವ ತಂಗಡಗಿ.
••••••••••••••••••••
ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ್ ಜೋಷಿ ಅವರ ಮೇಲಿನ ಆರೋಪಗಳ ಕುರಿತು ಸಹಕಾರ ಇಲಾಖೆಯಿಂದ ವಿಚಾರಣೆ ನಡೆದಿರುವುದು ಹಾಗೂ ಹೈಕೋರ್ಟ್ ನಲ್ಲಿ ಮೊಕದ್ದಮೆ ದಾಖಲಾಗಿರುವ ಹಿನ್ನೆಲೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳದಿರುವುದರಿಂದ ಕಸಾಪ ಅಧ್ಯಕ್ಷರು ಈ ಹಿಂದೆ ಘೋಷಣೆ ಮಾಡಿದಂತೆ 2025ರ ಡಿಸೆಂಬರ್ ಮಾಹೆಯಲ್ಲಿ ಸಮ್ಮೇಳನ ನಡೆಸಲು ಸಾಧ್ಯವಾಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದ್ದಾರೆ.
ಶಾಸಕ ಮಧು ಜಿ.ಮಾದೇಗೌಡರ ಪ್ರಶ್ನೆಗೆ ಬೆಳಗಾವಿ ಅಧಿವೇಶನದಲ್ಲಿ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಬಳ್ಳಾರಿಯಲ್ಲಿ ನಡೆಸಲು ಉದ್ದೇಶಿಸಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ರೂ. 10 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.
ಸಮ್ಮೇಳನ ಸಂಬಂಧ ವಿವಿಧ ಸಮಿತಿಗಳು ರಚನೆಯಾದ ನಂತರ ಸಮಿತಿಗಳು ನೀಡುವ ಒಟ್ಟಾರೆ ಪ್ರಸ್ತಾವನೆ ಮತ್ತು ಅಂದಾಜು ವೆಚ್ಚಗಳನ್ನು ಗಮನಿಸಿ ಬಳ್ಳಾರಿ ಜಿಲ್ಲಾಡಳಿತವು ಸಲ್ಲಿಸುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ವಿವರಿಸಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಹೆಸರನ್ನು 2025 ಜೂನ್ ಮಾಹೆಯಲ್ಲಿ ಘೋಷಣೆ ಮಾಡಿದ್ದನ್ನು ಸ್ಮರಿಸಬಹುದು.
*ವಿಶ್ವ ಕನ್ನಡ ಸಮ್ಮೇಳನ – ಇಲ್ಲ:*
ಮೂರನೇ ವಿಶ್ವ ಕನ್ನಡ ಸಮ್ಮೇಳನ ನಡೆಸುವ ಪ್ರಸ್ತಾವನೆಯು ಸರ್ಕಾರದ ಮುಂದಿರುವುದಿಲ್ಲ ಎಂದು ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದ್ದಾರೆ.
••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ…. ✒️
ಚಿಕ್ಕಮಗಳೂರು






