ನ.13ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: 15 ಸಾವಿರ ಕೋಟಿ ರೂಗೂ ಅಧಿಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ….
1 min read
ನ.13ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: 15
ಸಾವಿರ ಕೋಟಿ ರೂಗೂ ಅಧಿಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ..
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು
ನವೆಂಬರ್ 13.ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ 15 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಇದರ ಜೊತೆಗೆ ರೈಲ್ವೆ, ಪೆಟ್ರೋಲಿಯಂ, ನೈಸರ್ಗಿಕ ಅನಿಲ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳೂ ಲೋಕಾರ್ಪಣೆಯಾಗಲಿವೆ.
ಪ್ರಧಾನಿ ಮೋದಿ ಅವರ ಪ್ರವಾಸದ ವೇಳಾಪಟ್ಟಿ:
ನವೆಂಬರ್ 13ರಂದು ಬೆಳಗ್ಗೆ 10.05ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಬೆಳಗ್ಗೆ 10.45.ಕ್ಕೆ ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.40.ಕ್ಕೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮಂಡೂರ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.45.ಕ್ಕೆ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿ, ತಾವರೆಕೆರೆಯಿಂದ ಐಐಎಂಬಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1.15.ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ಬೆಂಗಳೂರು (ಯಶವಂತಪುರ)-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದು, ಸಂಜೆ 3.30ಕ್ಕೆ ಕೆ.ಸಿ. ಲೇಔಟ್ ಪಾರ್ಕ್‌ನಲ್ಲಿ ನಡೆಯುವ ‘ಭಾರತ್ ವ್ಯಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರು ಕಾಸ್ಮಾಸ್ ಪ್ಲಾನೆಟೋರಿಯಂ ಉದ್ಘಾಟಿಸಲಿದ್ದಾರೆ. ಸಂಜೆ 6.05ಕ್ಕೆ ಮೈಸೂರಿನಿಂದ ನೇರವಾಗಿ ದೆಹಲಿಗೆ ವಾಪಸಾಗಲಿದ್ದಾರೆ.
ಪ್ರಮುಖ ಅಭಿವೃದ್ಧಿ ಯೋಜನೆಗಳು:
ನಮ್ಮ ಮೆಟ್ರೋ ಪಿಂಕ್ ಲೈನ್: ಬೆಂಗಳೂರಿನ ಕಾಳೇನ ಅಗ್ರಹಾರದಿಂದ ಡೈರಿ ಸರ್ಕಲ್‌ವರೆಗಿನ 3,470 ಕೋಟಿ ರೂಪಾಯಿ ವೆಚ್ಚದ ಮೆಟ್ರೋ ಹಂತ-2.ರ ಎಲಿವೇಟೆಡ್ ಮಾರ್ಗವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
ರೈಲ್ವೆ ಯೋಜನೆಗಳು: ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ನೀಡುವುದರ ಜೊತೆಗೆ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದಲ್ಲದೆ, 294 ಕೋಟಿ ರೂಪಾಯಿ ವೆಚ್ಚದ ಬಾಗಲಕೋಟೆ-ವಂದಾಲ್ ಜೋಡಿ ರೈಲು ಮಾರ್ಗ ಹಾಗೂ 100 ಕೋಟಿ ರೂಪಾಯಿ ವೆಚ್ಚದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿಯನ್ನೂ ಉದ್ಘಾಟಿಸಲಿದ್ದಾರೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಯೋಜನೆಗಳು: ಮಂಗಳೂರಿನಲ್ಲಿ 854 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಎಚ್‌ಪಿಸಿಎಲ್‌ನ ಎಲ್‌ಪಿಜಿ ಸಂಗ್ರಹಣಾ ಭೂಗತ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ 123.42 ಕೋಟಿ ರೂಪಾಯಿ ವೆಚ್ಚದ ಕಂಪ್ರೆಸ್ ಬಯೋ ಗ್ಯಾಸ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 330 ಕೋಟಿ ರೂಪಾಯಿ ವೆಚ್ಚದ ಎಂಆರ್‌ಪಿಎಲ್ ಮಾರ್ಕೆಟಿಂಗ್ ಟರ್ಮಿನಲ್ ಕೂಡ ಲೋಕಾರ್ಪಣೆಯಾಗಲಿದೆ.
ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಯೋಜನೆಗಳು: ಕೊಪ್ಪಳ, ಗದಗ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಸರಣ ಯೋಜನೆಗಳು ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಒಟ್ಟು 4,445 ಕೋಟಿ ರೂಪಾಯಿ ವೆಚ್ಚದ ನವೀಕರಿಸಬಹುದಾದ ಇಂಧನ ಪ್ರಸರಣ ಯೋಜನೆ ಹಾಗೂ 1,368 ಕೋಟಿ ರೂಪಾಯಿ ವೆಚ್ಚದ ಬೀದರ್ ಸೌರಶಕ್ತಿ ಪ್ರಸರಣ ಯೋಜನೆ ಉದ್ಘಾಟನೆಯಾಗಲಿವೆ.
ಇದರೊಂದಿಗೆ ದಾವಣಗೆರೆ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದ 3,453 ಕೋಟಿ ಹಾಗೂ 1,111 ಕೋಟಿ ರೂಪಾಯಿ ವೆಚ್ಚದ ಪ್ರಸರಣ ವ್ಯವಸ್ಥೆ ಬಲವರ್ಧನೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿ ವೇಳೆ ಬೆಂಗಳೂರು ಮೆಟ್ರೋ, ರೈಲ್ವೆ, ಇಂಧನ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಲವು ಮಹತ್ವದ ಯೋಜನೆಗಳು ಜನರಿಗೆ ಸಮರ್ಪಣೆಯಾಗಲಿದ್ದು, ರಾಜ್ಯದ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.

