ಮಕ್ಕಳ ದಿನಾಚರಣೆ ಹಾಗೂ ಬಾಲ್ಯ ವಿವಾಹ ಮುಕ್ತ ಭಾರತ ಕಾರ್ಯಕ್ರಮ.
ಕೊಳೂರು ಬಿದರಹಳ್ಳಿ.. ಮಕ್ಕಳ ದಿನಾಚರಣೆ ಮತ್ತು ಬಾಲ್ಯ ವಿವಾಹ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ
ಕೊಳೂರು ಬಿದರಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಶ್ರಿತ ಸಂಸ್ಥೆ ವತಿಯಿಂದ ಮಕ್ಕಳ ದಿನಾಚರಣೆ ಹಾಗೂ ಬಾಲ್ಯ ವಿವಾಹ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ನವೀನ್ ಆನೆದಿಬ್ಬ ಅವರು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಆಶ್ರಿತ ಸಂಸ್ಥೆಯು ತಾಲೂಕಿನಲ್ಲಿ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ಶೋಷಣೆಯ ವಿರುದ್ಧ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಮಗುವಿಗೆ ತೊಂದರೆಯಾದಲ್ಲಿ ಅಥವಾ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಸಂಸ್ಥೆಯ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ತಿಳಿಸಿದರು.
ನವೆಂಬರ್ 14ರಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ. ಮಕ್ಕಳನ್ನು ಅಪಾರವಾಗಿ ಪ್ರೀತಿಸುತ್ತಿದ್ದ ನೆಹರು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದರು. ಅವರ ಪರಿಶ್ರಮ, ತ್ಯಾಗ ಮತ್ತು ಮಕ್ಕಳ ಮೇಲಿನ ಪ್ರೀತಿಯನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜ್ಯೋತಿ ಸಲ್ದಾನ ಅವರು ಮಾತನಾಡಿ, ಮಕ್ಕಳು ಉತ್ತಮ ಸಂಸ್ಕಾರ ಮತ್ತು ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜಾಗೃತಿಯಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಫಿ ನಾಡು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಸಮಾಜ ಸೇವಕರಾದ ಹಸೈನಾರ್ ಬಿಳಗುಳ ಅವರು ಮಾತನಾಡಿ, ಮಕ್ಕಳು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ತಮ್ಮ ಗುರಿ ತಲುಪಲು ಹೆಚ್ಚಿನ ಪರಿಶ್ರಮ ವಹಿಸಬೇಕು. ಎಲ್ಲಿಯಾದರೂ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಬಾಲಕಾರ್ಮಿಕ ಪದ್ಧತಿ ಅಥವಾ ಮಕ್ಕಳ ಮೇಲಿನ ಶೋಷಣೆ ಕಂಡುಬಂದಲ್ಲಿ ಆಶ್ರಿತ ಸಂಸ್ಥೆಯ ಕಾರ್ಯಕರ್ತರಿಗೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಮಾಹಿತಿ ನೀಡಬೇಕು. ಮಕ್ಕಳು ಯಾವುದೇ ರೀತಿಯ ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.



ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅರವಿಂದ್ ಸಿ.ಕೆ., ಪ್ರವೀಣ್, ವಿಜಯ್ ಕುಮಾರ್, ಕೆವಿನ್ ಮಾರ್ಟಿನ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

