लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
24/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಇಲ್ಲದಿದ್ದರೆ ಉಗ್ರ ಹೋರಾಟ ಅನಿವಾರ್ಯ – ಎಸ್‌ಡಿಪಿಐ ಎಚ್ಚರಿಕೆ……

1 min read

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಇಲ್ಲದಿದ್ದರೆ ಉಗ್ರ ಹೋರಾಟ ಅನಿವಾರ್ಯ – ಎಸ್‌ಡಿಪಿಐ ಎಚ್ಚರಿಕೆ

ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಕಾಡಾನೆಗಳ ಹಿಂಡನ್ನು ಸ್ಥಳಾಂತರಿಸುತ್ತಿರುವ ಅರಣ್ಯ ಇಲಾಖೆಯ ಕಾರ್ಯಾಚರಣೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶರೀಫ್ ಎಂ.ಯು. ಅವರು, ಆನೆಗಳ ಸ್ಥಳಾಂತರದ ಹೆಸರಿನಲ್ಲಿ ಮತ್ತೊಂದು ಪ್ರದೇಶದ ಜನರ ಜೀವವನ್ನು ಅಪಾಯಕ್ಕೆ ತಳ್ಳುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಈಗಾಗಲೇ ಕಾಫಿ ಕೊಯ್ಲು ಪ್ರಾರಂಭವಾಗಿದ್ದು, ಸಾವಿರಾರು ರೈತರು ಹಾಗೂ ಬಡ ಕೂಲಿ ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಡಾನೆಗಳ ಹಿಂಡನ್ನು ಭದ್ರ ಅಭಯಾರಣ್ಯಕ್ಕೆ ಸ್ಥಳಾಂತರಿಸುವುದು ಅತ್ಯಂತ ಅಪಾಯಕಾರಿ ನಿರ್ಧಾರವಾಗಿದೆ. ಆನೆಗಳ ಚಲನವಲನದಿಂದ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ರೈತರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಜನರ ಸುರಕ್ಷತೆಯನ್ನು ಕಡೆಗಣಿಸಿ ಇಂತಹ ಕಾರ್ಯಾಚರಣೆ ನಡೆಸುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಲೆನಾಡು ಭಾಗದ ಜನರು ಕಾಡಾನೆಗಳ ಹಾವಳಿಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾಡಾನೆ ದಾಳಿಯಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಪ್ರತಿಬಾರಿಯೂ ತಾತ್ಕಾಲಿಕ ಕ್ರಮಗಳನ್ನು ಕೈಗೊಂಡು ಜನರ ಕಣ್ಣೊರೆಸುವ ಕೆಲಸ ಮಾಡಲಾಗುತ್ತಿದೆ. ಒಂದು ಪ್ರದೇಶದ ಸಮಸ್ಯೆಯನ್ನು ಮತ್ತೊಂದು ಪ್ರದೇಶಕ್ಕೆ ವರ್ಗಾಯಿಸುವುದೇ ಸರ್ಕಾರದ ಪರಿಹಾರ ನೀತಿಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಡಾನೆಗಳ ಸ್ಥಳಾಂತರ ಮಾತ್ರ ಸಮಸ್ಯೆಗೆ ಪರಿಹಾರವಲ್ಲ. ಜನರ ಜೀವ ಮತ್ತು ರೈತರ ಬದುಕಿಗೆ ರಕ್ಷಣೆ ನೀಡುವ ಸಮಗ್ರ ಹಾಗೂ ಶಾಶ್ವತ ಯೋಜನೆಯನ್ನು ಸರ್ಕಾರ ರೂಪಿಸಬೇಕು. ಆನೆಗಳ ಸಂಚಾರಕ್ಕೆ ಸೂಕ್ತ ವ್ಯವಸ್ಥೆ, ಮಾನವ–ವನ್ಯಜೀವಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮಗಳು ಹಾಗೂ ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರ ಮತ್ತು ಸಂತ್ರಸ್ತರಿಗೆ ರಕ್ಷಣೆ ಒದಗಿಸಬೇಕು.
ಸರ್ಕಾರ ಕೂಡಲೇ ಈ ಕಾರ್ಯಾಚರಣೆಯ ಪರಿಣಾಮಗಳ ಕುರಿತು ಮರುಪರಿಶೀಲನೆ ನಡೆಸಿ, ಸ್ಥಳೀಯ ಜನರ ಸುರಕ್ಷತೆಯನ್ನು ಖಚಿತಪಡಿಸಬೇಕು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಎಸ್‌ಡಿಪಿಐ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಶರೀಫ್ ಎಂ.ಯು. ಅವರು ಎಚ್ಚರಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed