ಹಕ್ಕಿಜ್ವರ ನಿಯಂತ್ರಣಕ್ಕೆ ಗಡಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ #avintvcom
1 min read
ಹಕ್ಕಿಜ್ವರ ನಿಯಂತ್ರಣಕ್ಕೆ ಗಡಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ
ಕೊಡಗು:ನೆರೆಯ ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲಾ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಕೋಳಿ ಶೀತಜ್ವರ ಕಂಡುಬಂದಿದ್ದು, ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೋಳಿ ಶೀತ ಜ್ವರ (ಹಕ್ಕಿ ಜ್ವರ) ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ, ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸರ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಚೆಕ್ಪೋಸ್ಟ್ಗಳ ಸ್ಥಾಪನೆ ಮತ್ತು ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಲಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
‘ಹಕ್ಕಿಜ್ವರ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಯಂತೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದರು.’
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಸುರೇಶ್ ಭಟ್ ಅವರು ಪಶುಪಾಲನಾ ಇಲಾಖೆಯಿಂದ ಹಕ್ಕಿಜ್ವರ ನಿಯಂತ್ರಣ ಮತ್ತು ನಿರ್ವಹಣೆ ಮಾರ್ಗಸೂಚಿಯನ್ವಯ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯ ಕೇರಳ ರಾಜ್ಯದ ಗಡಿಭಾಗದಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಅರಣ್ಯ, ಪೊಲೀಸ್, ಸಾರಿಗೆ, ಆರೋಗ್ಯ, ಪಂಚಾಯತ್ ರಾಜ್ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಅವರು ಕೋರಿದರು.
ಅಸ್ವಾಭಾವಿಕವಾಗಿ ಕೋಳಿ ಅಥವಾ ವನ್ಯ ಪಕ್ಷಿಗಳ ಮರಣ ಕಂಡುಬಂದಲ್ಲಿ ಈ ಬಗ್ಗೆ ಗಮನಹರಿಸಿ ವರದಿ ಸಲ್ಲಿಸಲಾಗುವುದು ಎಂದರು.
ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಚಿದಾನಂದ ಅವರು ಹಕ್ಕಿಜ್ವರವು ಪಕ್ಷಿಗಳು ಹಾಗೂ ಕೋಳಿ ಮತ್ತಿತರ ಮೂಲಕ ಹರಡುವ ಸಾಧ್ಯತೆ ಇದ್ದು, ಕೇರಳ ರಾಜ್ಯದಲ್ಲಿ ಕಂಡು ಬಂದಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಳಿ ಮತ್ತು ಪಕ್ಷಿಗಳ ರಕ್ತ ಹಾಗೂ ಇಕ್ಕೆ ಮಾದರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.