ಮಾ.1ರಂದು ದಾರದಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೊತ್ಸವ*….
1 min read
*ಮಾ.1ರಂದು ದಾರದಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೊತ್ಸವ*
ತಾಲೂಕಿನ ದಾರದಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಮಾ.1ರಂದು ಹಮ್ಮಿಕೊಳ್ಳಲಾಗಿದೆ ಎಂದು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಡಿ.ಬಿ.ಜಯಪ್ರಕಾಶ್ ಹೇಳಿದರು.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು 1919ರಲ್ಲಿ ದಾರದಹಳ್ಳಿ ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆ ಪ್ರಾರಂಭಿಸಿದರು. ಸ್ವತಂತ್ರ ಪೂರ್ವದಲ್ಲಿ ಪ್ರಾರಂಭಗೊಂಡಿದ್ದ ಶಾಲೆಗಳಲ್ಲಿ ನಮ್ಮ ಗ್ರಾಮದ ಶಾಲೆ ಕೂಡ ಒಂದಾಗಿರುವುದು ಹೆಗ್ಗಳಿಕೆಯಾಗಿದೆ. ನಂತರ 1955ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದಜೆಗೇರಿದ್ದು, ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇದೀಗ ಈ ಶಾಲೆಗೆ 106 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು, ಶಿಕ್ಷಕವೃಂದದವರು ಸೇರಿ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದರು.
ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಸ್.ರಮೇಶ್ ಮಾತನಾಡಿ, ಕಾರ್ಯಕ್ರಮವನ್ನು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಶಾಸಕಿ ನಯನಾ ಮೋಟಮ್ಮ ವಹಿಸಲಿದ್ದಾರೆ. ಮಾಜಿ ಕೇಂದ್ರ ಸಚಿವೆ ಡಿ.ಕೆ.ತಾರಾದೇವಿ ಕಿರುಹೊತ್ತಿಗೆ ಬಿಡುಗಡೆಗೊಳಿಸಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಸ್ವರ್ಣಪೀಠಿಕಪುರ ಗೌರಿಗದ್ದೆ ದತ್ತಾಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ, ಸಾಹಿತಿಗಳಾದ ಚಟ್ನಳ್ಳಿ ಮಹೇಶ್, ಡಾ.ಎಚ್.ಎಂ.ಸತ್ಯನಾರಾಯಣ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಂಜೆ ಚಲನಚಿತ್ರ ಹಿನ್ನಲೆ ಗಾಯಕ ಆರ್.ಮಹೇಂದ್ರ ತಂಡದಿಂದ ರಸಮಂಜರಿ ಹಾಗೂ ವಿವಿಧ ಸಾಂಸ್ಕೃತಿಕಮ ಕಾರ್ಯಕ್ರಮ ನೆರವೇರಲಿದೆ. ಅಲ್ಲದೇ ಕಾರ್ಯಕ್ರಮದಲ್ಲಿ ದಾರದಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಪ್ರಮುಖರು ಹಾಗೂ ಶಾಲೆಯಲ್ಲಿ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಶತಮಾನೋತ್ಸವಕ್ಕೆ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಸಿದ್ದೇಶ್, ಪ್ರಚಾರ ಸಮಿತಿ ಅಧ್ಯಕ್ಷ ಗಣೇಶ್ ಮಗ್ಗಲಮಕ್ಕಿ ಉಪಸ್ಥಿತರಿದ್ದರು.

